ಪುತ್ತೂರು: ಮರೀಲ್ ಕೂರ್ನಡ್ಕದಲ್ಲಿರುವ ಮಸೀದಿ ಸಮೀಪ ಭಾನುವಾರ ಭೀಕರ ಬೈಕ್ ಅಪಘಾತ ಸಂಭವಿಸಿ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.



ಅದೇ ಸಂದರ್ಭದಲ್ಲಿ ತನ್ನ ಮನೆಗೆ ತುರ್ತಾಗಿ ತೆರಳುತ್ತಿದ್ದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರು ಅಪಘಾತವನ್ನು ಗಮನಿಸಿ ತಕ್ಷಣವೇ ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ತಮ್ಮ ಕಾರಿನಲ್ಲಿ ಸಮೀಪದ ಹಿತ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ದೊರಕುವಂತೆ ಮಾಡಿದ್ದಾರೆ.
ಗಾಯದ ತೀವ್ರತೆ ಗಮನಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಹ ಸಾರ್ವಜನಿಕರ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ರೋಷನ್ ಬನ್ನೂರು ಹಾಗೂ ಮೋನು ಬಪ್ಪಳಿಗೆ ಸಹ ಸಹಕರಿಸಿದ್ದಾರೆ ಎನ್ನಲಾಗಿದೆ.
ಅಪಘಾತದ ವೇಳೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ಪ್ರವೀಣ್ ಆಚಾರ್ಯ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.





