ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ದೇವಾಲಯದಲ್ಲಿ ಶ್ರೀ ದೇವರ ನಡೆಯಲ್ಲಿ ಜಾತ್ರೆಯ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಾರ್ಷಿಕ ಜಾತ್ರೆಯು ಏಪ್ರಿಲ್ 10ರಿಂದ ಆರಂಭಗೊಂಡು ಏಪ್ರಿಲ್ 17ರಂದು ಮಹಾರಥೋತ್ಸವ ನಡೆಯಲಿದೆ.





ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ , ಮಹಾಲಿಂಗೇಶ್ವರ ದೇವರ ಜಾತ್ರೆಯನ್ನು ಈ ಬಾರಿಯೂ ಅತ್ಯಂತ ಅದ್ದೂರಿಯಾಗಿ ಮತ್ತು ಯಶಸ್ವಿಯಾಗಿ ನಡೆಸಲು ಭಕ್ತರ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ದೇವರಿಗೆ ಬಂಗಾರದ ಕವಚದಿಂದ ಶೃಂಗಾರ ಮಾಡುವ ಕನಸು ಇದ್ದು, ಅದಕ್ಕೂ ಭಕ್ತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಕೃಷ್ಣವೇಣಿ, ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ. ಶೆಟ್ಟಿ, ವಿನಯ ಸುವರ್ಣ, ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಹಾಗೂ ವ್ಯವಸ್ಥಾಪಕ ಹರೀಶ್ ಉಪಸ್ಥಿತರಿದ್ದರು.


