ಉಳ್ಳಾಲ : ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ ಆಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.
ಮೃತರನ್ನು ಕೊನಾಜೆ ಗ್ರಾಮದ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಅವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಎಂದು ಗುರುತಿಸಲಾಗಿದೆ.

ವಿವೇಕ್ ಮಂಗಳೂರಿನ ಕದ್ರಿ ಪ್ರದೇಶದಲ್ಲಿರುವ ವಿವೇಕ್ ಮೋಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಸಾಮಾನ್ಯವಾಗಿ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಆದರೆ ಘಟನೆ ನಡೆದ ದಿನ ಅವರು ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದರು. ಈ ವೇಳೆ ಮೊಬೈಲ್ ಫೋನ್ ಹಾಗೂ ಚಪ್ಪಲಿಯನ್ನು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದೆ.
ಆ ದಿನ ಸಂಜೆ ವೇಳೆ ಅವರು ಮನೆಯವರಿಗೆ ಕರೆ ಮಾಡಿ “ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ಬರಲು ತಡವಾಗಬಹುದು, ನನ್ನನ್ನು ಕಾಯಬೇಡಿ” ಎಂದು ತಿಳಿಸಿದ್ದರು ಎನ್ನಲಾಗಿದೆ. ಆದರೆ ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಬಳಿಕ ಎಲ್ಲೆಡೆ ಹುಡುಕಾಟ ನಡೆಸಿದರೂ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಈ ಮಧ್ಯೆ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆಯಾಗಿ ನಂತರ ಅದು ವಿವೇಕ್ ಶೆಟ್ಟಿಗಾರ್ ಅವರದ್ದೇ ಎಂದು ಗುರುತಿಸಲಾಗಿದೆ. ಸುಮಾರು ಎಂಟು ತಿಂಗಳ ಹಿಂದೆ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ತಿಳಿದುಬಂದಿದೆ.
ಘಟನೆ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *