ಕಡಬ : ಉತ್ಪನ್ನಗಳ ಮಾರಾಟಕ್ಕಾಗಿ ತೆರಳಿದ್ದ ಯುವತಿಗೆ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿಯಾದ ಯುವತಿ ಒಬ್ಬಳು ಸೇಲ್ಸ್ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಸಂಸ್ಥೆಯ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಏಪ್ರಿಲ್ 8ರಂದು ಮಧ್ಯಾಹ್ನ ತನ್ನ ಇಬ್ಬರು ಸಹೋದ್ಯೋಗಿ ಯುವತಿಯರೊಂದಿಗೆ ಕಡಬ ತಾಲೂಕಿನ ಬಲ್ಯ-ದೇರಜೆ ಪ್ರದೇಶಕ್ಕೆ ತೆರಳಿದ್ದರು.





ಈ ವೇಳೆ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ನಿವಾಸಿಯೊಬ್ಬ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆ ಕುರಿತು ವಿಚಾರಿಸಲು ಬಂದ ಸಹೋದ್ಯೋಗಿಗಳ ಮೇಲೂ ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಯುವತಿ ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೈಂ ನಂ. 43/2026 ಅಡಿಯಲ್ಲಿ BNS-2023ರ ಕಲಂ 74, 79, 115(2) ಮತ್ತು 351(2) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

