ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕುಂಟೋಡಿಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪೈಂಟಿಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಾದಾಮಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬ ಕಲಹ ಹಾಗೂ ದೀರ್ಘಕಾಲದ ಅನಾರೋಗ್ಯದಿಂದ ಮನನೊಂದಿದ್ದ ವ್ಯಕ್ತಿಯೊಬ್ಬರು ಮನೆಯ ಅಂಗಳದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕುಂಟೋಡಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಕುಂಟೋಡಿ ನಿವಾಸಿ ಕುಂಡ ಮೊಗೇರ ಎಂಬವರ ಪುತ್ರ ವಸಂತ ಕೆ. (47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ವೃತ್ತಿಯಲ್ಲಿ ಪೈಂಟರ್ ಆಗಿ ಕೆಲಸ ಮಾಡಿಕೊಂಡಿದ್ದರು.





ವಸಂತ ಅವರ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಮಂಗಳೂರಿನ ನಾಗೂರಿಯ ತೃಪ್ತ ಆಸ್ಪತ್ರೆಯಲ್ಲಿ ಸುಮಾರು ಮೂರು ತಿಂಗಳ ಕಾಲ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದ ಅವರನ್ನು ಏಪ್ರಿಲ್ 3ರಂದು ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಮಾನಸಿಕವಾಗಿ ಪೂರ್ಣವಾಗಿ ಚೇತರಿಸಿಕೊಳ್ಳದ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ.


ಬುಧವಾರ ಸಂಜೆ ಮನೆಯವರು ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಸಂತ ಅವರು ಅಂಗಳದಲ್ಲಿದ್ದ ಬಾದಾಮಿ ಗಿಡಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಮನೆಯವರು ದೇವಸ್ಥಾನದಿಂದ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಗಮನಿಸಿದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.
ಈ ಕುರಿತು ಮೃತರ ಸಹೋದರ ಗಿರೀಶ್ ಕೆ. ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಪೊಲೀಸರು ಪರಿಶೀಲನೆ ನಡೆಸಿದ್ದು, ಯುಡಿಆರ್ ನಂಬರ್ 14/2026 ಕಲಂ 194 BNSS-2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣದಲ್ಲಿ ಯಾವುದೇ ಸಂಶಯವಿಲ್ಲ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

