ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಮತ್ತು ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಪ್ರಾದೇಶಿಕ ಕಚೇರಿ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿನ ಸುಮಾರು 56,432 ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಇದುವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ ಎಂಬುದನ್ನು ಅವರು ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಿ, ಪಾರದರ್ಶಕವಾಗಿ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅಗತ್ಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.






ಈ ಕ್ರಮದಿಂದ ನಿರುದ್ಯೋಗ ಸಮಸ್ಯೆ ತಗ್ಗುವುದರ ಜೊತೆಗೆ ಸರ್ಕಾರದ ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಳವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಾವಂತ ಯುವಕರು ಸರ್ಕಾರಿ ಉದ್ಯೋಗಕ್ಕಾಗಿ ಸಿದ್ಧತೆ ನಡೆಸುತ್ತಿರುವುದರಿಂದ, ಮಂಗಳೂರು ಪ್ರದೇಶದಲ್ಲಿ KPSC ಪ್ರಾದೇಶಿಕ ಕಚೇರಿ ಸ್ಥಾಪನೆಯ ಅಗತ್ಯತೆಯನ್ನು ಅವರು ಒತ್ತಿಹೇಳಿದ್ದಾರೆ.
ಪ್ರಸ್ತುತ KPSCನ ಎಲ್ಲಾ ಪ್ರಮುಖ ಕಾರ್ಯಗಳು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿರುವುದರಿಂದ ಕರಾವಳಿ ಭಾಗದ ಅಭ್ಯರ್ಥಿಗಳು ಪ್ರಯಾಣ ಹಾಗೂ ಇತರೆ ಸೌಲಭ್ಯಗಳ ವಿಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಮಂಗಳೂರಿನಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪನೆಯಿಂದ ಯುವಜನರಿಗೆ ಹೆಚ್ಚಿನ ಅನುಕೂಲ ಸಿಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದಲ್ಲದೆ, ಡಿಸೆಂಬರ್ 2025ರಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ, 43 ಇಲಾಖೆಗಳಲ್ಲಿಯೇ ಸುಮಾರು 2,84,881 ಹುದ್ದೆಗಳು ಖಾಲಿ ಇರುವುದಾಗಿ ಮಾಹಿತಿ ಲಭಿಸಿತ್ತು. ಈ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅವರು ಆಗಲೇ ಮನವಿ ಸಲ್ಲಿಸಿದ್ದರು.
ಈ ಎರಡೂ ಬೇಡಿಕೆಗಳು ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಯುವಜನರಿಗೆ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಸಹಕಾರಿಯಾಗಲಿದ್ದು, ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ.


