ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ವ್ಯಾಪಕವಾಗಿ ಕಾಣಿಸಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ಶಿಶಿಲ ಪ್ರದೇಶದಲ್ಲಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ನಾಶಪಡಿಸಿದ್ದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಲವು ತೋಟಗಳಲ್ಲಿ ಬೆಳೆ ಹಾನಿಯಾಗಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ. ವಸತಿ ಪ್ರದೇಶಗಳ ಬಳಿ ಕಾಡಾನೆಗಳು ಕಾಣಿಸಿಕೊಂಡಾಗ ಕಟ್ಟುನಿಟ್ಟಿನ ನಿಗಾವಹಿಸಿ, ಕೂಡಲೇ ಅವುಗಳನ್ನು ಕಾಡಿನೊಳಗೆ ಮರಳಿಸುವಂತೆ ಹಾಗೂ ಮಾನವ ಜೀವಹಾನಿ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಕಾಡಾನೆ ಉಪಟಳದಿಂದ ಜನಜೀವನಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *