ಬಳ್ಳಾರಿ: ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ನಾಯಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೃತನನ್ನು ಗಲಾಟೆ ವೇಳೆ ಗಂಭೀರವಾಗಿ ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತನೆಂದು ಗುರುತಿಸಲಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಜನಾರ್ದನ ರೆಡ್ಡಿ ಮನೆ ಸಮೀಪ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿ, ಅದು ಬಾಂಬ್ ಎಸೆಯುವ ಮಟ್ಟಿಗೆ ತೀವ್ರಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಗರದಲ್ಲಿ ಶಾಂತಿ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಾಟೆಗೆ ಕಾರಣ ಹಾಗೂ ದಾಳಿಯ ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಘಟನೆ ಬಳ್ಳಾರಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *