ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಬ್ದುಲ್ ರಫೂಫ್ @ ಮೀಸೆ ರಫೂಫ್ (48) ಎಂಬ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಫೂಫ್ ಮೂಲತಃ ಮುಸ್ತಫಾ ಮಂಜಿಲ್, ವಿಜಯಾ ಬ್ಯಾಂಕ್ ಎದುರು, ಉಪ್ಪಳ, ಮಂಜೇಶ್ವರ ತಾಲೂಕು, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ನಿವಾಸಿಯಾಗಿದ್ದಾನೆ.

ಈತನ ವಿರುದ್ಧ ಮಂಗಳೂರು ನಗರ ಹಾಗೂ ಕೇರಳ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಇದರಲ್ಲಿ ಕಾವೂರು, ಕೊಣಾಜೆ, ಮಂಜೇಶ್ವರ, ವಿದ್ಯಾನಗರ ಹಾಗೂ ಕುಂಬ್ಳೆ ಪೊಲೀಸ್ ಠಾಣೆಗಳ ವ್ಯಾಪ್ತಿಯ ಗಂಭೀರ ಸ್ವರೂಪದ ಪ್ರಕರಣಗಳು ಸೇರಿವೆ. ಐಪಿಸಿ ಸೆಕ್ಷನ್‌ಗಳು 380, 457, 461, 324, 308 ಸೇರಿದಂತೆ Arms Act, CrPC ಹಾಗೂ ಇತರೆ ಕಾನೂನುಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಯಾದ ಬಳಿಕವೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣ ಈತನ ವಿರುದ್ಧ ಘೋಷಿತ ಅಪರಾಧಿ (Proclaimed Offender) ಎಂದು ಘೋಷಿಸಲಾಗಿತ್ತು. ಇತ್ತೀಚೆಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *