ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್  ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಜಾಮೀನು ನೀಡಿದರೂ ಕೂಡ ಪರಾರಿಯಾಗಲ್ಲ. ಇನ್ನುಳಿದ ಎರಡು ಪ್ರಕರಣದ ಟ್ರಯಲ್‌ಗೆ ಸಕಾಲಕ್ಕೆ ಹಾಜರಾಗುತ್ತಾರೆ. ಹೀಗಾಗಿ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಏನಿದು ಪ್ರಕರಣ?

ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.

Leave a Reply

Your email address will not be published. Required fields are marked *