ವಾಷಿಂಗ್ಟನ್‌ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಬಂಧಿಸಿದ ಬಳಿಕ ಜಾಗತಿಕ ಮಟ್ಟದಲ್ಲಿ ಕಠಿಣ ನಿಲುವು ತಾಳಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೆ ಭಾರತದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಆಮದು ಮುಂದುವರಿಸಿದರೆ ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ವ್ಯಕ್ತಿ ಎಂದು ಹೇಳಿದ ಟ್ರಂಪ್‌, “ನಾನು ಸಂತೋಷವಾಗಿಲ್ಲ ಎಂಬುದು ಅವರಿಗೆ ಗೊತ್ತಿದೆ. ನನ್ನನ್ನು ಸಂತೋಷಪಡಿಸುವುದು ಮುಖ್ಯವಾಗಿತ್ತು. ಆದರೂ ಭಾರತ ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದೆ. ಅಗತ್ಯವಿದ್ದರೆ ಭಾರತ ಮೇಲೆ ಶೀಘ್ರದಲ್ಲೇ ಮತ್ತಷ್ಟು ಸುಂಕ ಹೆಚ್ಚಿಸಬಹುದು” ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಟ್ರಂಪ್‌ ಹೇಳಿದ್ದರು. ಆದರೆ ಆ ಹೇಳಿಕೆಯ ನಂತರವೂ ಭಾರತ ರಷ್ಯಾದಿಂದ ತೈಲ ಆಮದು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಟ್ರಂಪ್‌ ಅಸಮಾಧಾನಗೊಂಡಿದ್ದಾರೆ.

ಭಾರತ ಮತ್ತು ಅಮೆರಿಕ 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ಪ್ರಸ್ತುತ 191 ಬಿಲಿಯನ್ ಡಾಲರ್‌ನಿಂದ 500 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಿವೆ. ವ್ಯಾಪಾರ ಒಪ್ಪಂದ ಅಂತಿಮಗೊಳಿಸುವ ಉದ್ದೇಶದಿಂದ ಎರಡೂ ದೇಶಗಳ ನಡುವೆ ಆರು ಸುತ್ತಿನ ಮಾತುಕತೆ ನಡೆದಿದ್ದರೂ ಇನ್ನೂ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ.
ಟ್ರಂಪ್‌ ತೆರಿಗೆ ಸಮರ ಆರಂಭಿಸಿದ ಬಳಿಕ ಯುರೋಪ್‌ ಸೇರಿದಂತೆ ಹಲವು ದೇಶಗಳ ನಾಯಕರು ಅಮೆರಿಕಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಭಾರತವೂ ಅಮೆರಿಕದೊಂದಿಗೆ ಚರ್ಚೆ ನಡೆಸಿದ್ದು, ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಹಲವು ಸುತ್ತಿನ ಮಾತುಕತೆಗಳ ಬಳಿಕವೂ ಭಾರತ ತನ್ನ ನಿಲುವು ಬದಲಾಯಿಸದ ಹಿನ್ನೆಲೆಯಲ್ಲಿ, ಸಿಟ್ಟುಗೊಂಡ ಟ್ರಂಪ್‌ ಭಾರತದ ಕೆಲವು ವಸ್ತುಗಳ ಮೇಲೆ 25 ಶೇಕಡಾ ಸುಂಕ ವಿಧಿಸಿದ್ದಾರೆ.

Leave a Reply

Your email address will not be published. Required fields are marked *