ಅಲಂಕಾರು: ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆನೆರೆಂಕಿಯಲ್ಲಿ ನಿವೇಶನರಹಿತ ರೈತರಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಅವರು, ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸಬೇಕು ಎಂಬ ಉದ್ದೇಶದಿಂದ ಹಲವು ವರ್ಷಗಳಿಂದ ಪ್ರಯತ್ನ ನಡೆದಿದ್ದು, ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಮನವಿ ಮತ್ತು ಅಧಿಕಾರಿಗಳ ಸಹಕಾರದಿಂದ ಈ ಕಾರ್ಯ ನೆರವೇರಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ರಾಮಕುಂಜ ಗ್ರಾಮ ಪಂಚಾಯತ್ ಕಳೆದ ಐದು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ್ದು, ಯಾವುದೇ ಗ್ರಾಮ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ರಾಜಕೀಯ ಇರಬಾರದು. ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದರೆ ಗ್ರಾಮ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ರಾಜಕೀಯ ಭೇದಗಳನ್ನು ಬಿಟ್ಟು ಎಲ್ಲರೂ ಒಟ್ಟಾಗಿ ಗ್ರಾಮ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ತಿಳಿಸಿದರು.




ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸುಮಾರು 25 ಲಕ್ಷ ರೂ. ಅನುದಾನವನ್ನು ಈ ಭಾಗದ ರಸ್ತೆ ಅಭಿವೃದ್ಧಿಗೆ ಮಂಜೂರು ಮಾಡಲಾಗಿದ್ದು, ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯುವ ವೇಳೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಮಕುಂಜ ಗ್ರಾಮ ಪಂಚಾಯತ್ ಉತ್ತಮ ಕಾರ್ಯಗಳ ಮೂಲಕ ಮಾದರಿ ಗ್ರಾಮವಾಗಿ ಹೊರಹೊಮ್ಮಿ ತಾಲೂಕು ಹಾಗೂ ಜಿಲ್ಲೆಯಲ್ಲಿ ಹೆಸರು ಗಳಿಸಲಿ ಎಂದು ಶುಭ ಹಾರೈಸಿದರು.





