ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐತೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಕಾಡುಕೋಣ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಾಲತೇಶ ಅರಸ್ ಆಗ್ರಹಿಸಿದ್ದಾರೆ.


ಅರಣ್ಯ ಅಧಿಕಾರಿಗಳನ್ನು ಸಹ ತನಿಖೆಯ ಒಳಪಡಿಸಿದರೆ ನಿಜವಾದ ಖದೀಮರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸೂಕ್ತ ಆದೇಶ ಹೊರಡಿಸಿ ನಿಷ್ಪಕ್ಷಪಾತ ತನಿಖೆಗೆ ದಾರಿಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.




ಕಡಬದ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ದೂರಿನಲ್ಲಿ, ಸ್ಥಳೀಯ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ನಿಯಮಗಳನ್ನು ಗಾಳಿಗೆ ತೂರಿ ತನಿಖೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಕಚೇರಿ ವತಿಯಿಂದ ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಅರ್ಜಿದಾರರು ಉಲ್ಲೇಖಿಸಿರುವ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ತನಿಖೆಯಲ್ಲಿ ಲೋಪಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಪ್ರಕರಣವು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕೆಂಬ ಬೇಡಿಕೆ ಹೆಚ್ಚುತ್ತಿದೆ.


