ಪುತ್ತೂರು:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕು ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಅರಿಯಡ್ಕ ವಲಯದ ಬಡಗನ್ನೂರು ಕಾರ್ಯಕ್ಷೇತ್ರದ ಜ್ಞಾನದೀಪ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಇಂದು ಜ್ಞಾನವಿಕಾಸ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಡಗನ್ನೂರು ಕಾರ್ಯಕ್ಷೇತ್ರದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಗತಿಪರ ಕೃಷಿಕ ಹಾಗೂ ನಿಕಟ ಪೂರ್ವ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ನಾರಾಯಣ ರೈ ಕುದ್ಕಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಹಲವು ಮಾಹಿತಿ ಹಾಗೂ ಸೌಲಭ್ಯಗಳು ದೊರೆಯುತ್ತಿದ್ದು, ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕುಟುಂಬವನ್ನು ಮುನ್ನಡೆಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಮಹಿಳೆಯರು ಈ ತರಬೇತಿಯನ್ನು ಉದ್ಯೋಗವಾಗಿ ಮುಂದುವರೆಸಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಬೇಕು ಎಂದು ಶುಭ ಹಾರೈಸಿದರು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಶಶಿಧರ್ ಎಂ ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಸದಸ್ಯರಿಗೆ ಲಭಿಸುತ್ತಿರುವ ಪ್ರಯೋಜನಗಳ ಬಗ್ಗೆ ವಿವರಿಸಿದರು. ಖಾವಂದರು ಹಾಗೂ ಮಾತೃಶ್ರೀ ಅಮ್ಮನವರ ಮೂಲ ಪರಿಕಲ್ಪನೆಯಿಂದ ಸಮಾಜದಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಅದರ ಫಲವಾಗಿ ಅನೇಕ ಕುಟುಂಬಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬಂದಿದೆ ಎಂದು ಹೇಳಿದರು. ಮಹಿಳೆಯರು ಸ್ವ ಉದ್ಯೋಗ ಕೈಗೊಂಡರೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿ, ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ಮೂರು ತಿಂಗಳ ತರಬೇತಿಯಲ್ಲಿ ಮಹಿಳೆಯರು ಪಡೆದಿರುವ ಕೌಶಲ್ಯವು ಅವರ ಬದುಕು ಕಟ್ಟಿಕೊಳ್ಳುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು. ತರಬೇತಿಯಲ್ಲಿ ಮಹಿಳೆಯರು ಹೊಲಿದ ಬಟ್ಟೆಗಳನ್ನು ನೋಡಿ ಸಂತಸ ವ್ಯಕ್ತಪಡಿಸಿದ ಅವರು, ಇಂತಹ ತರಬೇತಿಗಳು ಗ್ರಾಮ ಮಟ್ಟದಲ್ಲಿ ಇನ್ನಷ್ಟು ನಡೆಯಬೇಕೆಂದು ಹೇಳಿದರು

ಈ ಸಂದರ್ಭದಲ್ಲಿ ತರಬೇತಿಯಲ್ಲಿ ಭಾಗವಹಿಸಿದ ಸದಸ್ಯರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ಜೋಹಾರ, ರಶ್ಮಿತ, ರೋಹಿಣಿ ಹಾಗೂ ವನ್ಯಶ್ರೀ ಅವರು ಮೂರು ತಿಂಗಳ ತರಬೇತಿಯಿಂದ ಪಡೆದ ಅನುಭವ ಹಾಗೂ ಪ್ರಯೋಜನಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಟೈಲರಿಂಗ್ ತರಬೇತಿ ಪಡೆದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೂಡ ನಡೆಸಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಹರೀಶ್ ಕೆ, ಟೈಲರಿಂಗ್ ತರಬೇತಿ ಶಿಕ್ಷಕಿ ಸವಿತಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ತರಬೇತಿ ಪಡೆದ ಮಹಿಳೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಶೋಭಾ ಪ್ರಾರ್ಥನೆ ಸಲ್ಲಿಸಿದರು. ವಿಜಯಲಕ್ಷ್ಮಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಸಾವಿತ್ರಿ ಧನ್ಯವಾದ ಸಲ್ಲಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *