ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.




ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಟಪಾಡಿ ಜಂಕ್ಷನ್ ಬಳಿಯಲ್ಲಿ ಪಲ್ಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಅಂಡರ್ಪಾಸ್ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯನ್ನು ಡೈವರ್ಶನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗವಾಗಿ ಬಂದ ಟ್ಯಾಂಕರ್ ಅನ್ನು ಚಾಲಕ ತಿರುಗಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾದುದು ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್ ಮೇಲೆ ನಿರಂತರವಾಗಿ ನೀರು ಹಾಯಿಸಿ ತಂಪಾಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಕ್ರಮ ಕೈಗೊಂಡಿವೆ. ಜೊತೆಗೆ ಇತರ ಟ್ಯಾಂಕರ್ಗಳ ಮೂಲಕವೂ ನೀರನ್ನು ತರಿಸಿ ಸುರಿಯಲಾಗುತ್ತಿದೆ.


ತಜ್ಞರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್ನಲ್ಲಿರುವ ಗ್ಯಾಸನ್ನು ಸುರಕ್ಷಿತವಾಗಿ ಮತ್ತೊಂದು ಟ್ಯಾಂಕರ್ಗೆ ವರ್ಗಾಯಿಸುವ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಾಸ ಉಂಟಾಯಿತು.


