ಬಂಟ್ವಾಳ:
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ದಿ. 13-12-2025ರ ಸಂಜೆ, ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮಣಿನಾಲ್ಕೂರು–ತೆಕ್ಕಾರು ರಸ್ತೆಯಲ್ಲಿ ಯಾವುದೇ ಪರವಾಣಿಗೆ ಇಲ್ಲದೆ ಜಾನುವಾರು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿದರು. ಈ ವೇಳೆ KA-70-8686 ನೋಂದಣಿ ಹೊಂದಿರುವ ಗೂಡ್ಸ್ ಆಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಪತ್ತೆಯಾಯಿತು.




ವಿಚಾರಣೆ ವೇಳೆ ಚಾಲಕನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ (56) ಎಂದು ತಿಳಿದುಬಂದಿದೆ. ಆತನು ಬಂಟ್ವಾಳ ಸರಪಾಡಿ ಪ್ರದೇಶದ ಭೋಜಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲೆ ಅಥವಾ ಪರವಾಣಿಗೆ ಇಲ್ಲದೆ, ಜಾನುವಾರನ್ನು ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರು, ಗೂಡ್ಸ್ ಆಟೋ ಹಾಗೂ ಒಂದು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2025 ಅಡಿ, ಕಲಂ 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ–2020 ಮತ್ತು ಕಲಂ 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.


ಇದಲ್ಲದೆ, ಆರೋಪಿತ ಭೋಜಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರೆಸುತ್ತಿದ್ದಾರೆ.


