ಮಂಗಳೂರು:
ವಿದೇಶದಲ್ಲಿದ್ದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ಆರೋಪದಡಿ ಮಂಗಳೂರು ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆರೋಪಿ ಅಬ್ದುಲ್ ಖಾದರ್ ನಹಾದ್ (27), ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯು ವಿದೇಶದಲ್ಲಿರುವ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಧರ್ಮ, ದೇವತೆಗಳು ಹಾಗೂ ಧಾರ್ಮಿಕ ನಂಬಿಕೆಗಳ ಕುರಿತು ಅವಹೇಳನಕಾರಿ ಬರಹಗಳು ಮತ್ತು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಮಂಗಳೂರು ನಗರದಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಲುಕ್‌ಔಟ್ ಸರ್ಕ್ಯುಲರ್ (LOC) ಹೊರಡಿಸಿದ್ದರು. ಡಿಸೆಂಬರ್ 14ರಂದು ನಹಾದ್ ವಿದೇಶದಿಂದ ಭಾರತಕ್ಕೆ ಆಗಮಿಸಿದ ತಕ್ಷಣವೇ ವಲಸೆ ಮತ್ತು ಭದ್ರತಾ ಅಧಿಕಾರಿಗಳ ಸಹಕಾರದೊಂದಿಗೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ತನಿಖೆಯಲ್ಲಿ, ಆರೋಪಿ ‘team_sdpi_2025’ ಎಂಬ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಈ ಪೋಸ್ಟ್‌ಗಳು ಸಾರ್ವಜನಿಕರಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶ ಹೊಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಧಾರ್ಮಿಕ ಸಾಮರಸ್ಯ ಕದಡುವ ಯಾವುದೇ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *