ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ವೈದ್ಯರು, ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಆರೋಗ್ಯಾಧಿಕಾರಿ, ಸಾರ್ವಜನಿಕರ ಬಳಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ಕಡಬ(ದಕ್ಷಿಣ ಕನ್ನಡ): ಕಡಬ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20 ರಂದು ಬೆಳಗ್ಗೆ 10.30ಕ್ಕೆ ಕಡಬ ತಾಲೂಕು ಅಖಿಲ ಕರ್ನಾಟಕ ರೈತ, ಕೃಷಿ, ಕಾರ್ಮಿಕರ ಒಕ್ಕೂಟ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಸಿಬ್ಬಂದಿಯ ಅಸಮರ್ಪಕ ನಿಯೋಜನೆ ಹಾಗೂ ಮೂಲ ಸೌಕರ್ಯಗಳ ಕೊರತೆ ಕುರಿತು ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಗುರುವಾರ ಕಡಬ ಸಮುದಾಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ಮುಖಂಡರೊಂದಿಗೆ ಸಭೆ ನಡೆಸಿದರು.

ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು ಆಸ್ಪತ್ರೆಯ ಪ್ರಸ್ತುತ ಪರಿಸ್ಥಿತಿ, ಸಿಬ್ಬಂದಿ ನಿಯೋಜನೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ, ಸಮಸ್ಯೆಗಳನ್ನು ಬಗೆಹರಿಸದ ಹೊರತು ಪ್ರತಿಭಟನೆ ಹಿಂಪಡೆಯಲಾಗುವುದಿಲ್ಲ ಎಂದು ಪ್ರತಿಭಟನೆಯ ಉಸ್ತುವಾರಿ ವಹಿಸಿದ ಸಯ್ಯದ್ ಮೀರಾ ಸಾಹೇಬ್ ಸೇರಿದಂತೆ ಮುಖಂಡರು ಹೇಳಿದರು.


ಈ ಬಗ್ಗೆ ಈಟಿವಿ ಭಾರತದ ಜೊತೆಗೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ತಿಮ್ಮಯ್ಯ ಅವರು, “ಆಸ್ಪತ್ರೆಯಲ್ಲಿನ ಸೌಲಭ್ಯಗಳ ಸುಧಾರಣೆ, ವೈದ್ಯರು, ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಇಲಾಖೆಗೆ ಸೇರುವ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಮುಂದೆ ಬರುತ್ತಿಲ್ಲ. ಇವರೆಲ್ಲ ನಗರದ ಕಡೆಗೆ ಒಲವು ತೋರುತ್ತಿದ್ದಾರೆ. ಎಲ್ಲ ಸೌಲಭ್ಯಗಳು ಇದ್ದರೂ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಲವು ಮೂಲಭೂತ ವ್ಯವಸ್ಥೆಗಳ ಕೊರತೆ ಹಾಗೂ ಸಿಬ್ಬಂದಿ ನಿಯೋಜನೆ ಸಂಬಂಧಿತ ಅಸಮಾಧಾನಗಳಿರುವುದು ಗಮನಕ್ಕೆ ಬಂದಿದೆ” ಎಂದರು.
“ಈ ಸಮಸ್ಯೆಗಳ ಪರಿಹಾರಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ನಮ್ಮ ಮೊದಲ ಆದ್ಯತೆ. ಅಗತ್ಯವಿರುವ ವೈದ್ಯರು ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿ ನಿಯೋಜಿಸಲು ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲಿದೆ. ಯಾರಾದರೂ ಎಂಬಿಬಿಎಸ್ ಡಾಕ್ಟರ್‌ಗಳು ಇದ್ದರೆ, ಈಗಾಗಲೇ ಆರೋಗ್ಯ ಇಲಾಖೆ ಹೊರಡಿಸಿರುವ ವ್ಯವಸ್ಥೆಯ ಮೂಲಕ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು, ರಾಜಕೀಯ ಮುಖಂಡರು ಸಹಕಾರ ನೀಡಿದರೆ ತಾಲೂಕು ಕೇಂದ್ರದಲ್ಲಿರುವ ಕಡಬ ಆಸ್ಪತ್ರೆಯನ್ನು ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಸಹಭಾಗಿತ್ವದಲ್ಲಿ ಕಡಬದ ಸರಕಾರಿ ಆಸ್ಪತ್ರೆಗೆ ಸೇವೆಗಳನ್ನು ನೀಡುವ ಕುರಿತು ಮಾತುಕತೆಗಳು ನಡೆದಿವೆ. ಮಂಗಳೂರಿನಲ್ಲೂ ಈ ಪ್ರಯತ್ನ ಯಶಸ್ವಿಯಾಗಿದೆ. ಜನರ ಸಹಕಾರದಿಂದ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ನೀಡುವುದು ನಮ್ಮ ಉದ್ದೇಶ” ಎಂದು ಹೇಳಿದರು.

ನ.20ರಂದು ಬೆಳಗ್ಗೆ 10.30ಕ್ಕೆ ಕಡಬ ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆಯುವ ಪ್ರತಿಭಟನಾ ಸಭೆಯಲ್ಲಿ, ತಾಲೂಕು ಅಖಿಲ ಕರ್ನಾಟಕ ರೈತ, ಕಾರ್ಮಿಕರ ಒಕ್ಕೂಟ ಸಮಿತಿಯ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ಧಿ, ವೈದ್ಯರ ಹುದ್ದೆ ತುಂಬಿಕೆ, ಔಷಧ ಪೂರೈಕೆ ಮತ್ತು ಸಾರ್ವಜನಿಕ ಆರೋಗ್ಯದ ಕುರಿತ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ನಿರ್ಧರಿಸಲಾಗಿದೆ.

