ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಜನ್ಮಸಿದ್ಧ ಹಕ್ಕು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು.

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ಮತಚೌರಿ ಹಾಗೂ ಎಸ್‌.ಐ.ಆರ್‌ ವಿಷಯದಲ್ಲಿ ಕಾಂಗ್ರೆಸ್ ಅಪಪ್ರಚಾರ ನಡೆಸಿ ಮುಖಕ್ಕೆ ಮಸಿ ಬಳಿದುಕೊಂಡಿದೆ. ಇದೀಗ ವಿಕಸಿತ ಭಾರತ ಉದ್ಯೋಗ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) ಕಾಯ್ದೆ ಬಗ್ಗೆ ತಪ್ಪು ಮಾಹಿತಿ ಹರಡುವುದು ಕಾಂಗ್ರೆಸ್‌ನ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

1977ರ ದಶಕದಲ್ಲಿ ಜನತಾ ಪಕ್ಷದ ಪ್ರಧಾನಿಯಾಗಿದ್ದ ಮೋರಾರ್ಜಿ ದೇಸಾಯಿ ಕೂಲಿಗಾಗಿ ಕಾಳು ಯೋಜನೆ ಜಾರಿಗೆ ತಂದಿದ್ದರು. ನಂತರ ಕಾಂಗ್ರೆಸ್ ಸರ್ಕಾರ ಅದನ್ನು ಜವಾಹರ ರೋಜಗಾರಿ ಯೋಜನೆ ಎಂದು ಪುನರ್ ನಾಮಕರಣ ಮಾಡಿತು. ಬಳಿಕ ಉದ್ಯೋಗ ಖಾತರಿ ಯೋಜನೆ ಹಾಗೂ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಎಂಬ ಹೆಸರಿನಲ್ಲಿ ಮುಂದುವರಿಸಲಾಯಿತು. ಹಲವು ಬಾರಿ ಯೋಜನೆಯ ಹೆಸರನ್ನು ಬದಲಾಯಿಸಿದ್ದು ಕಾಂಗ್ರೆಸ್ ಸರ್ಕಾರವೇ ಎಂದು ಅವರು ಆರೋಪಿಸಿದರು.
ಈಗ ಸ್ವಾತಂತ್ರ್ಯಕ್ಕೆ 100 ವರ್ಷ ಪೂರ್ಣಗೊಳ್ಳುವ 2047ರ ಗುರಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ಪಂಚಾಯತ್ ವಿಕಸಿತ ಪಂಚಾಯತ್ ಆಗಬೇಕೆಂಬ ಉದ್ದೇಶದಿಂದ ವಿಕಸಿತ ಭಾರತ ಉದ್ಯೋಗ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ ಜಾರಿಗೆ ತರಲಾಗಿದೆ ಎಂದು ಹೇಳಿದರು. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ವಿವರಿಸಿದರು.
ಹೊಸ ಯೋಜನೆಯಲ್ಲಿ ಗ್ರಾಮೀಣ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 100 ದಿನಗಳ ಉದ್ಯೋಗ ಖಾತರಿಯನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ. ಕೇಂದ್ರ ಮತ್ತು ರಾಜ್ಯಗಳ ಹಂಚಿಕೆ ಅನುಪಾತವನ್ನು 60:40 ಮಾಡಲಾಗಿದೆ. ಡಿಜಿಟಲೀಕರಣ, ಬಯೋಮೆಟ್ರಿಕ್ ಹಾಜರಾತಿ, ಜಿಪಿಎಸ್ ಅಳವಡಿಕೆ ಸೇರಿದಂತೆ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಿ ಪಾರದರ್ಶಕತೆ ತರಲಾಗಿದೆ ಎಂದು ಹೇಳಿದರು.
ಯೋಜನೆಯ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ರಾಜ್ಯ ಸರ್ಕಾರದ ಭಾಗವಹಿಸುವಿಕೆಯನ್ನು ಬಲಪಡಿಸುವುದು ಉದ್ದೇಶವಾಗಿದ್ದು, ಕರ್ನಾಟಕ ಸರ್ಕಾರ ಆರ್ಥಿಕವಾಗಿ ದುರ್ಬಲಗೊಂಡಿದೆ. ಯೋಜನೆಗೆ ಅಗತ್ಯವಾದ ಶೇ.40 ಪಾಲನ್ನು ನೀಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಿರುವುದರಿಂದ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೂ ರಾಜ್ಯ ಸರ್ಕಾರಕ್ಕೆ ವಿಶ್ವಾಸವಿಲ್ಲ. ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಎಪಿಎಂಸಿ ಚುನಾವಣೆಗಳನ್ನು ನಡೆಸುತ್ತಿಲ್ಲ. ಗ್ರಾಮೀಣ ಪಂಚಾಯತ್‌ಗಳನ್ನು ಸಬಲೀಕರಣ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಮಾಜಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಭಟ್ ಹಾಗೂ ನಾಗೇಶ್ ಟಿ.ಎಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *