ಮಂಗಳೂರು: ವೃದ್ಧೆಯೊಬ್ಬರು ಮನೆಯಲ್ಲಿ ಒಂಟಿಯಾಗಿ ಇದ್ದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




ಮನೆ ಮಾಲಕಿ ಒಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಮನೆಗೆ ಪ್ರವೇಶಿಸಿ, ಅಲಮಾರಿಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನ ನಡೆದ ಬಳಿಕ ವೃದ್ಧೆ ಪೊಲೀಸರಿಗೆ ದೂರು ನೀಡಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಾಥಮಿಕ ಮಾಹಿತಿಯಂತೆ, ಸುಮಾರು 4 ಲಕ್ಷ 43 ಸಾವಿರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ಮೊಬೈಲ್ ಫೋನ್ ಕಳವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


