ಪುತ್ತೂರು : 40ನೇ ವರ್ಷದ ಉಬಾರ್ ಕಂಬಳೋತ್ಸವವು ಮಾ.28ರಂದು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಆಯೋಜಕರು ತಿಳಿಸಿದ್ದಾರೆ.




ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಈ ಬಾರಿ ಕಂಬಳೋತ್ಸವವನ್ನು ವೈಭವದಿಂದ ನಡೆಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಬಾರಿ ವಿಶೇಷವಾಗಿ ಮಂಜೋಡಿಗೆ ನೆರಳಿಗಾಗಿ ಅತಿ ಎತ್ತರದ ಚಪ್ಪರವನ್ನು ನಿರ್ಮಿಸಲಾಗಿದ್ದು, ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ಜೊತೆಗೆ ಚಲನಚಿತ್ರ ನಟ-ನಟಿಯರ ಆಗಮನವೂ ವಿಶೇಷ ಆಕರ್ಷಣೆಯಾಗಲಿದೆ.



ಮಾ.28ರಂದು ಬೆಳಗ್ಗೆ 8 ಗಂಟೆಗೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್ ಕಂಬಳಕರೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಭಾಪತಿ ಯು.ಟಿ. ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು, ಕಂಬಳ ಹಾಗೂ ಉದ್ಯಮ ಕ್ಷೇತ್ರದ ಗಣ್ಯರನ್ನು ಗೌರವಿಸಲಾಗುವುದು. ರಾಷ್ಟ್ರೀಯ ಜೂನಿಯರ್ ಕಬಡ್ಡಿ ಚಾಂಪಿಯನ್ ಆಟಗಾರ ಅಧೀಶ್ ಶೆಟ್ಟಿ ಅವರನ್ನು ಅಭಿನಂದಿಸಲಾಗುವುದು.
ಕಾರ್ಯಕ್ರಮದ ಮತ್ತೊಂದು ಆಕರ್ಷಣೆಯಾಗಿ ಚಿತ್ರರಂಗದ ಕಲಾವಿದರು ಭಾಗವಹಿಸಲಿದ್ದು, ಸುಕೃತ್ ನಾಗ್, ವಷಿಷ್ಠ ಸಿಂಹ, ಸ್ವರಾಜ್ ಶೆಟ್ಟಿ, ಅರವಿಂದ ಬೋಳಾರ್, ಭವ್ಯ ಪೂಜಾರಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ.
ಮಾ.29ರಂದು ಕಂಬಳೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ, ಗೌರವ ಸಲಹೆಗಾರ ನಿರಂಜನ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.


