ಪುತ್ತೂರು : ಆರು ವರ್ಷಗಳ ಹಿಂದೆ ಸ್ಥಾಪನೆಗೊಂಡು ಇದೀಗ ಏಳನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ನೆಹರುನಗರದಲ್ಲಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ವಿಸ್ತರಿತ ಕಟ್ಟಡದ ಉದ್ಘಾಟನಾ ಸಮಾರಂಭ ಮಾರ್ಚ್ 25ರಂದು ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆ ದಿಲ್ಲಿಯ ಸಿಬಿಎಸ್‌ಇ ಮಂಡಳಿಗೆ ಸಂಯೋಜಿತವಾಗಿದ್ದು, ಸಿಬಿಎಸ್‌ಇ ಪಠ್ಯಕ್ರಮವನ್ನು ಅನುಸರಿಸುತ್ತಿದೆ. ಪ್ರಸ್ತುತ ಶಾಲೆಯಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹೆಚ್ಚುತ್ತಿರುವ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ದ್ವಿತೀಯ ಮಹಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.

ಮಾರ್ಚ್ 25ರಂದು ಬೆಳಗ್ಗೆ ನೂತನ ಕಟ್ಟಡದಲ್ಲಿ ಗಣಪತಿ ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಪರಾಹ್ನ 3 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಡಾ. ಕೆ.ಎಂ. ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹಾಗೂ ಉಪಾಧ್ಯಕ್ಷ ಸತೀಶ್ ರಾವ್ ಗೌರವ ಉಪಸ್ಥಿತರಿರುವರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಶಾಲೆ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವಿಸ್ತರಣೆ ಕೈಗೊಳ್ಳಲಾಗಿದೆ ಎಂದು ವಸಂತಿ ಕೆ. ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕ ಭರತ್ ಪೈ, ಪ್ರಾಂಶುಪಾಲರಾದ ಸಿಂಧು ವಿ.ಜಿ., ಉಪ ಪ್ರಾಂಶುಪಾಲರಾದ ಶ್ರೀದೇವಿ ಹೆಗಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *