ಸುಳ್ಯ ತಾಲ್ಲೂಕಿನ ಕೊಡಿಯಾಳ ಗ್ರಾಮದ ಆರ್ವರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನಿಷ್ (3) ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಪ್ರಕರಣ ಭಾನುವಾರ ಬೆಳಿಗ್ಗೆ ದುರ್ಘಟನೆಗೆ ತಿರುಗಿದೆ. ತಾಯಿ–ಮಗು ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಧುಶ್ರೀ ಅವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಮಗುವಿನೊಂದಿಗೆ ನಾಪತ್ತೆಯಾಗಿದ್ದು, ಬೆಳಿಗ್ಗೆವರೆಗೆ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಮನೆಯ ಸಮೀಪದ ಕೆರೆಯಲ್ಲಿ ಇಬ್ಬರ ಶವಗಳು ಕಂಡುಬಂದಿವೆ.
ಘಟನೆ ಬಗ್ಗೆ ಮಾಹಿತಿ ಪಡೆದ ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ, ವೈಯಕ್ತಿಕ ಕಾರಣಗಳಿಂದ ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಆದರೆ, ಸಾವಿನ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *