ಪುತ್ತೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಾಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ‘ಮಹಿಳಾ ಸಂಭ್ರಮ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವೆ ಸಿ . ಮೋಟಮ್ಮ , ಮಹಿಳೆಯರಲ್ಲಿ ಸಂಘಟನೆ ಮತ್ತು ಒಗ್ಗಟ್ಟು ಬಹಳ ಮುಖ್ಯವಾಗಿದೆ. ಇದರಿಂದ ರಾಜಕೀಯ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಇಂದು ಮಹಿಳೆಯರ ಮತ ಶೇ.50ರಷ್ಟಿದ್ದು, ಮಹಿಳೆಯರು ತಮ್ಮ ಏಳಿಗೆಗಾಗಿ ಹಾಗೂ ರಾಜಕೀಯದಲ್ಲಿ ಸ್ಥಾನಮಾನ ಪಡೆಯಲು ಹೋರಾಟ ಮಾಡಬೇಕು ಎಂದರು. ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಮಿತಿಗಳಲ್ಲಿ ಮಹಿಳೆಯರ ಪ್ರಾಬಲ್ಯ ಇರಬೇಕು. ರಾಜಕೀಯ ನಾಯಕರ ಹಿಂದೆ ಓಡಾಡಿದರೆ ಸ್ಥಾನಮಾನ ಸಿಗುವುದಿಲ್ಲ; ಚುನಾವಣೆ ಬಂದಾಗ ನಾಯಕರು ನಿಮ್ಮ ಮುಂದೆ ಬಂದು ನಿಲ್ಲಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಕುಟುಂಬ ಹಾಗೂ ಸಮಾಜದಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸುತ್ತಾರೆ. ಸಮಸ್ಯೆಗಳು ಎದುರಾದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಒಂದು ಜೀವಿಗೆ ಜೀವ ನೀಡುವ ಶಕ್ತಿ ಮಹಿಳೆಯರಿಗಿದ್ದು, ಅವರನ್ನು ದೇವತಾ ಸಮಾನವಾಗಿ ಕಾಣಲಾಗುತ್ತದೆ ಎಂದು ಹೇಳಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಮಹಿಳೆಯರು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಶೆರಿಲ್ಲಾ ಅವರು ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಒಬ್ಬರು ಆಶಾ ಕಾರ್ಯಕರ್ತೆ ಹಾಗೂ ಒಬ್ಬರು ಅಂಗನವಾಡಿ ಕಾರ್ಯಕರ್ತೆಯನ್ನು ಕುಂಕುಮ ಮತ್ತು ಬಳೆ ನೀಡಿ ಗೌರವಿಸುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೊದಲ ಬಾರಿಗೆ ಮಹಿಳಾ ಕಾಂಗ್ರೆಸ್ ವತಿಯಿಂದ ಎಂಟು ಮಂದಿ ಮಾಜಿ ಮಹಿಳಾ ಸೈನಿಕರಿಗೆ ‘ಪ್ರಿಯದರ್ಶಿನಿ ವೀರನಾರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಫೋನ್ಸಾ ನೆಲ್ಯಾಡಿ, ಸ್ಯಾಂಡಿ ಸೆಬಾಸ್ಟಿನ್, ಮಿನಿ ಸಂತೋಷ್, ಲಿಸ್ಸಿ ಡೊಮಿನಿಕ್, ಸವಿತಾ ವಿಕ್ರಂ ಶೆಟ್ಟಿ, ಕಮಲಾಕ್ಷಿ, ಯಶೋದಾ ಹಾಗೂ ಶಕುಂತಳಾ ನಾಯ್ಕ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷೆ ಉಷಾ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಮಾಜಿ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್, ಜಿ.ಪಂ. ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿ.ಪಂ. ಮಾಜಿ ಸದಸ್ಯ ಪಿ.ಪಿ. ವರ್ಗಿಸ್, ಕಡಬ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ್ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ ಪೆರ್ನೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *